ಮೈಸೂರು, ಅಕ್ಟೋಬರ್ 19,2026 (www.justkannada.in): ಮೈಸೂರಿನಲ್ಲಿ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣದಲ್ಲಿ ಅಪರಾಧಿಗೆ ಗಲ್ಲುಶಿಕ್ಷೆ ವಿಧಿಸಿರುವ ವಿಶೇಷ ಪೋಕ್ಸೋ ನ್ಯಾಯಾಲಯದ ತೀರ್ಪನ್ನು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.
ಮೈಸೂರು ನಗರದ ಇಟ್ಟಿಗೆಗೂಡಿನ ನಾಗಲಕ್ಷ್ಮೀ ದೇವಸ್ಥಾನದ ಸಮೀಪ 2025ರ ಅಕ್ಟೋಬರ್ 9ರಂದು ನಡೆದಿದ್ದ 9 ವರ್ಷದ ಮುಗ್ಧ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ಸಮಾಜದ ಮನಸ್ಸನ್ನು ಘಾಸಿಗೊಳಿಸಿದ ಅತ್ಯಂತ ಅಮಾನವೀಯ ಘಟನೆಯಾಗಿತ್ತು ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಪ್ರಕರಣದಲ್ಲಿ ಅಪರಾಧಿ ಕಾರ್ತಿಕ್ ಅಲಿಯಾಸ್ ಗರಡಿ ಎಂಬಾತನಿಗೆ ಮೈಸೂರಿನ 1ನೇ ಶೀಘ್ರಗತಿ ವಿಶೇಷ ಪೋಕ್ಸೋ ನ್ಯಾಯಾಲಯವು ಅಕ್ಟೋಬರ್ 17ರಂದು ಗಲ್ಲುಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಅಪರಾಧಿಗೆ ₹1 ಲಕ್ಷ ದಂಡ ವಿಧಿಸಿರುವ ನ್ಯಾಯಾಲಯವು, ಸಂತ್ರಸ್ತ ಬಾಲಕಿಯ ಪೋಷಕರಿಗೆ ₹13.50 ಲಕ್ಷ ಪರಿಹಾರ ನೀಡುವಂತೆಯೂ ಆದೇಶಿಸಿದೆ ಎಂದು ತಿಳಿಸಿದ್ದಾರೆ.
ಪೊಲೀಸರ ಕಾರ್ಯವೈಖರಿಗೆ ಅಭಿನಂದನೆ
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಮೈಸೂರು ನಗರ ಪೊಲೀಸರು ಅತ್ಯಂತ ತ್ವರಿತವಾಗಿ ಕಾರ್ಯಪ್ರವೃತ್ತರಾಗಿ, ಪ್ರಕರಣ ದಾಖಲಾದ 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ್ದರು.
ಪ್ರಕರಣದ ತನಿಖೆಯನ್ನು ಅತ್ಯಂತ ಸಮರ್ಥವಾಗಿ ನಡೆಸಿದ ತನಿಖಾ ತಂಡಕ್ಕೆ ಸಚಿವ ಯತೀಂದ್ರ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.
ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಸರ್ಕಾರ ಬದ್ಧ
ಸಂತ್ರಸ್ತ ಬಾಲಕಿಯ ಕುಟುಂಬ ಅನುಭವಿಸಿರುವ ನೋವು ಅಪಾರವಾದದ್ದು. ಆ ಮುಗ್ಧ ಬಾಲಕಿಯ ಅಗಲಿಕೆಯ ನೋವನ್ನು ಯಾವುದೇ ಪರಿಹಾರದಿಂದ ಭರಿಸಲು ಸಾಧ್ಯವಿಲ್ಲ. ಸಂತ್ರಸ್ತ ಕುಟುಂಬದ ದುಃಖದಲ್ಲಿ ನಾವೆಲ್ಲರೂ ಭಾಗಿಯಾಗಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ.
ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ರಾಜ್ಯ ಸರ್ಕಾರ ಅತ್ಯಂತ ಹೆಚ್ಚಿನ ಆದ್ಯತೆ ನೀಡುತ್ತಿದೆ. ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ ಇಂತಹ ಘೋರ ಅಪರಾಧಗಳಲ್ಲಿ ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಮಕ್ಕಳ ಸುರಕ್ಷತೆ ಹಾಗೂ ರಕ್ಷಣೆಗೆ ಸರ್ಕಾರ, ಪೊಲೀಸ್ ಇಲಾಖೆ ಮತ್ತು ಸಮಾಜ ಒಟ್ಟಾಗಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕಾಗಿದೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.
Key words: rape and murder case, Death sentence , Minister, Dr. Yathindra Siddaramaiah, welcomes, court verdict







