ಬೆಂಗಳೂರು, ಆಗಸ್ಟ್,13,2025 (www.justkannada.in): ಬಾಲ್ಯವಿವಾಹ ತಡೆಗೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದ್ದು ಬಾಲ್ಯವಿವಾಹ ತಡೆಗಟ್ಟಲು ಎಲ್ಲರ ಸಹಕಾರ ಅಗತ್ಯ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಇಂದು ಅಧಿವೇಶನದಲ್ಲಿ ಜೆಡಿಎಸ್ ಶಾಸಕ ಸುರೇಶ್ ಬಾಬು ಅವರು ಬಾಲ್ಯ ವಿವಾಹ ಕುರಿತು ಪ್ರಸ್ತಾಪಿಸಿದರು. ರಾಜ್ಯದಲ್ಲಿ ಬಾಲ್ಯ ವಿವಾಹ, ಚಿಕ್ಕವಯಸ್ಸಿನಲ್ಲೇ ಗರ್ಭಿಣಿ ಪ್ರಕರಣಗಳು ಹೆಚ್ಚಾಗುತ್ತಿದೆ. ಹೈಸ್ಕೂಲ್ ಸಮಯದಲ್ಲಿ ಪ್ರೀತಿ ಪ್ರೇಮದ ಹೆಸರಲ್ಲಿ ವಿವಾಹ, ಕಳೆದ ಮೂರು ವರ್ಷಗಲ್ಲಿ ಇಂತಹ ಪ್ರಕರಣ ಹೆಚ್ಚಾಗಿವೆ. ಪ್ರಕರಣಗಳ ತಡೆಗೆ ತಹಶೀಲ್ದಾರ್ ನೇತೃತ್ವದಲ್ಲಿ ತಂಡ ರಚಿಸಬೇಕು ಎಂದು ಆಗ್ರಹಿಸಿದರು.
ಶಾಸಕ ಸುರೇಶ್ ಬಾಬು ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರ ಕಾಳಜಿಗೆ ನಾನು ಅಭಿನಂದಿಸುತ್ತೇನೆ. ನಮ್ಮ ಸರ್ಕಾರ ಬಾಲ್ಯ ವಿವಾಹ ತಡೆಗೆ ಸಾಕಷ್ಟು ತಿದ್ದುಪಡಿ ತಂದಿದೆ. ಬಾಲ್ಯವಿವಾಹ ಸಾಮಾಜಿಕ ಪೀಡುಗಾಗಿದ್ದು, ಇದನ್ನು ಬೇರುಮಟ್ಟದಿಂದ ಕಿತ್ತು ಹಾಕಬೇಕು. ಕೆಲವು ಸಮುದಾಯ ಮತ್ತು ಪಂಗಡಗಳಲ್ಲಿ ಆಚರಣೆಯಲ್ಲಿರುವ ಸಾಮಾಜಿಕ ಪದ್ಧತಿಗಳಿಂದಾಗಿ ಬಾಲ್ಯವಿವಾಹಗಳು ನಡೆಯುತ್ತಿದೆ. ಇದರಿಂದಾಗಿ ಬಾಲಗರ್ಭಿಣಿಯರ ಸಂಖ್ಯೆ ಹೆಚ್ಚಾಗುತ್ತಿದೆ. ಬಾಲ್ಯವಿವಾಹಗಳನ್ನು ತಡೆಗಟ್ಟಲು ಸರ್ಕಾರ ಈಗಾಗಲೇ ಕಾಯ್ದೆಯನ್ನು ಜಾರಿಗೆ ತಂದಿದೆ. ನಮ್ಮ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ಮಕ್ಕಳ ರಕ್ಷಣಾ ಸಮಿತಿ (ಸಿಡಬ್ಲ್ಯುಸಿ) ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.
ಬಾಲ್ಯ ವಿವಾಹ ತಡೆಗಟ್ಟುವ ಸಲುವಾಗಿ ಸೋಷಿಯಲ್ ಮೀಡಿಯಾಗಳಿಗೆ ಕಡಿವಾಣ ಹಾಕಬೇಕಿದೆ. ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಗೃಹ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ಇಲಾಖೆಗಳು ಜಂಟಿಯಾಗಿ ಕಾರ್ಯನಿರ್ವಹಿಸಲಿವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
Key words: Strict action, government, prevent, child marriage, Minister, Lakshmi Hebbalkar