ಮಿಂಟೋ ಆಸ್ಪತ್ರೆ ವೈದ್ಯರ ಮೇಲೆ ಹಲ್ಲೆ ಆರೋಪ ಕೇಸ್: 13 ಮಂದಿ ಕರವೇ ಕಾರ್ಯಕರ್ತರು ಪೊಲೀಸರ ಮುಂದೆ ಶರಣು….

ಬೆಂಗಳೂರು,ನ,8,2019(www.justkannada.in):  ಮಿಂಟೋ ಕಣ್ಣಿನ ಆಸ್ಪತ್ರೆ ವೈದ್ಯರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ವಿನಿಗೌಡ ಸೇರಿ 13 ಮಂದಿ ಕರವೇ ಕಾರ್ಯಕರ್ತರು ವಿವಿ ಪುರಂ ಠಾಣಾ ಪೊಲೀಸರ ಮುಂದೆ ಶರಣಾಗಿದ್ದಾರೆ.

ಸೌತ್ ಅಂಡ್ ಡಿಸಿಪಿ ವಿಭಾಗ ಕಚೇರಿ ಮುಂದೆ 13 ಮಂದಿ ಕರವೇ ಕಾರ್ಯಕರ್ತರು ಪೊಲೀಸರ ಮುಂದೆ ಶರಣಾಗಿದ್ದಾರೆ. ಕರವೇ ಕಾರ್ಯಕರ್ತರಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಿದ್ದು ನಂತರ ಪೊಲೀಸರು ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.

ನವೆಂಬರ್ 1ರಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಿಂಟೋ ಆಸ್ಪತ್ರೆಗೆ ನುಗ್ಗಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಮಿಂಟೋ ಕಣ್ಣಿನ ಆಸ್ಪತ್ರೆ ವೈದ್ಯರ ದೂರಿನ ಅನ್ವಯ ಕರವೇ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿತ್ತು.  ಐಪಿಸಿ ಸೆಕ್ಷನ್ 506, 341,149ರಡಿ ಪ್ರಕರಣ ದಾಖಲಾಗಿತ್ತು ಎನ್ನಲಾಗಿದೆ.

ವೈದ್ಯರ ಮೇಲೆ ಹಲ್ಲೆ ಖಂಡಿಸಿ ವೈದ್ಯರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಇಂದು ಖಾಸಗಿ ಆಸ್ಪತ್ರೆಯ ಒಪಿಡಿ ಬಂದ್  ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ. ಇದೀಗ ರೋಗಿಗಳ ಹಿತದೃಷ್ಠಿಯಿಂದ ನಮ್ಮ ಕಾರ್ಯಕರ್ತರು ಪೊಲೀಸರ ಮುಂದೆ ಶರಣಾಗಲಿದ್ದಾರೆ ಎಂದು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ತಿಳಿಸಿದ್ದರು. ಅಂತೆಯೇ 13 ಮಂದಿ ಕರವೇ ಕಾರ್ಯಕರ್ತರು ಶರಣಾಗಿದ್ದಾರೆ.

Key words: Minto hospital –doctor–assult–karave activitist–surrender –police