ಮೈಸೂರು, ಅಕ್ಟೋಬರ್,5,3036 (www.justkannada.in) ಮತದಾರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ನಡೆದಿರುವ ಅಕ್ರಮಗಳ ವಿರುದ್ಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ ಪ್ರತಿಭಟನೆಯ ವರದಿಗೆ ತೆರಳಿದ್ದ ಪತ್ರಕರ್ತೆಯರ ಮೇಲೆ ಪೋಲಿಸರು ಲೈಂಗಿಕ ದೌರ್ಜನ್ಯ ಎಸಗಿರುವುದು ಖಂಡನೀಯ ಎಂದು ವಿಧಾನ ಪರಿಷತ್ ಸದಸ್ಯ ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.
ದೆಹಲಿಯ ಜಂತರ್ ಮಂತರ್ ನಲ್ಲಿ ಅ.3 ರಂದು ನಡೆದಿರುವ ಈ ಘಟನೆಯಲ್ಲಿ ಎಸಿಪಿ ಸೇರಿದಂತೆ ಪೊಲೀಸ್ ಸಿಬ್ಬಂದಿ ಭಾಗಿಯಾಗಿದ್ದಾರೆ ಎಂದು ಸಂತ್ರಸ್ತ ಪತ್ರಕರ್ತೆಯರು ಆರೋಪ ಮಾಡಿದ್ದಾರೆ. ರಕ್ಷಣೆ ಒದಗಿಸಬೇಕಾದ ಪೊಲೀಸರು ಈ ರೀತಿಯಲ್ಲಿ ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವುದು ಅಮಾನವೀಯ ಎಂದಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾಂಗವು ನಾಲ್ಕನೇ ಆಧಾರ ಸ್ತಂಭವಾಗಿದ್ದು, ಸಮಾಜದಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ಸತ್ಯ ಮತ್ತು ನಿಖರವಾದ ಮಾಹಿತಿ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಸಾರ್ವಜನಿಕರಿಗೆ ತಮ್ಮ ಹಕ್ಕುಗಳು, ಕರ್ತವ್ಯಗಳು ಹಾಗೂ ಸಮಾಜದ ಅನಿಷ್ಟ ಪಿಡುಗುಗಳ ಬಗ್ಗೆ ಜಾಗೃತಿ ಮೂಡಿಸುತ್ತಿವೆ. ಈ ದೌರ್ಜನ್ಯವು ಪತ್ರಿಕಾಂಗದ ಮೇಲೆ ನಡೆದ ನೇರ ದಾಳಿಯಾಗಿದೆ. ಪೊಲೀಸರ ಈ ದೌರ್ಜನ್ಯ ಕುರಿತು ಕೂಡಲೇ ಪ್ರಕರಣ ದಾಖಲಿಸಬೇಕು. ಈ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ತಪ್ಪಿತಸ್ಥರನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಒತ್ತಾಯಿಸುತ್ತೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






