ಮುಡಾ ಹಗರಣ: ನನ್ನ ರಾಜೀನಾಮೆ ಕೇಳುತ್ತಿರುವುದರಲ್ಲಿ ಯಾವುದೇ ಅರ್ಥವಿಲ್ಲ- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜುಲೈ, 3, 2024 (www.justkannada.in):  ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ವಾಲ್ಮೀಕಿ ಹಗರಣ ಮತ್ತು ಮುಡಾ ಭ್ರಷ್ಟಾಚಾರ ಖಂಡಿಸಿ ಬಿಜೆಪಿ ನಡೆಸಿದ ಪ್ರತಿಭಟನೆ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಹಂಚಿಕೆಯಾಗಿದ್ದ ಎಲ್ಲಾ ನಿವೇಶನಗಳನ್ನು ಅಮಾನತ್ತಿನಲ್ಲಿಟ್ಟು, ತನಿಖೆ ನಡೆಸಲಾಗುತ್ತಿದೆ. ಈ ನಿವೇಶನಗಳು ಹಂಚಿಕೆಯಾಗಿದ್ದು ಬಿಜೆಪಿ ಅವಧಿಯಲ್ಲಿ. ಹಿಂದೆ ನಿವೇಶನ ಹಂಚಿದವರು ಬಿಜೆಪಿಯವರೇ ಆಗಿರುವುದರಿಂದ  ನನ್ನ ರಾಜೀನಾಮೆ ಕೇಳುತ್ತಿರುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದರು.

ಮುಡಾ ಹಗರಣ ಸಿಬಿಐಗೆ ವಹಿಸಬೇಕೆಂದು ಬಿಜೆಪಿ ಆಗ್ರಹಕ್ಕೆ ಟಾಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ, ಹಿಂದೆ ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನ ಸಿಬಿಐಗೆ ನೀಡಿದ್ದರು. ಒಂದೇ ಒಂದು ಪ್ರಕರಣವನ್ನೂ ಸಿಬಿಐಗೆ ನೀಡಿಲ್ಲ. ಜಮೀನು ಕೊಟ್ಟವರಿಗೆ ಪರ್ಯಾಯವಾಗಿ ನಿವೇಶನ ನೀಡಬೇಕೆಂದು ಬಿಜೆಪಿಯೇ ಕಾನೂನು ಮಾಡಿದೆ. ಈಗ ಅವರೇ ಅದನ್ನು ಹಗರಣ ಎನ್ನುತ್ತಿದ್ದಾರೆ ಎಂದು ಕಿಡಿಕಾರಿದರು.

ವಾಲ್ಮೀಕಿ ಅಭಿವೃದ್ದಿ ನಿಗಮದ ಪ್ರಕರಣದ ಬಗ್ಗೆ ಎಸ್‍ಐಟಿ ತನಿಖೆ ನಡೆಯುತ್ತಿದೆ. ಸಚಿವರಾಗಿದ್ದ ನಾಗೇಂದ್ರ ಅವರಿಂದ ರಾಜೀನಾಮೆ ಪಡೆಯಲಾಗಿದೆ. ಡೆತ್ ನೋಟ್‌ ನಲ್ಲಿ ಮಂತ್ರಿಗಳು ವ್ಯವಸ್ಥಾಪಕ ನಿರ್ದೇಶಕರಿಗೆ ಮೌಖಿಕ ಆದೇಶ ನೀಡಿದ್ದರು ಎಂದು ಬರೆದಿರುವ ಕಾರಣ ರಾಜೀನಾಮೆ ಪಡೆದೆವು. ಬ್ಯಾಂಕ್ ವ್ಯವಹಾರಗಳ ಬಗ್ಗೆ ಸಿಬಿಐ ತನಿಖೆ ಕೈಗೊಂಡಿದೆ. ಈ ಹಗರಣದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂದು ಪತ್ತೆ ಹಚ್ಚುವ ಕಾರಣಕ್ಕಾಗಿಯೇ ಎಸ್‍ಐಟಿ ರಚನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.

Key words: Muda, scandal, resignation, CM, Siddaramaiah