ಮೈಸೂರು, ಅಕ್ಟೋಬರ್,10,2026 (www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ಹೊರವಲಯದ ಸ್ವಚ್ಛತೆಗೆ ಮೈಸೂರು ಮಹಾನಗರ ಪಾಲಿಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ರಿಂಗ್ ರೋಡ್ ನಾದ್ಯಂತ ಎರಡನೇ ಸುತ್ತಿನ ಬೃಹತ್ ಸ್ವಚ್ಛತಾ ಅಭಿಯಾನ ನಡೆಸಿ, ರಸ್ತೆ ಬದಿಗಳಲ್ಲಿ ರಾಶಿಯಾಗಿದ್ದ ಕಸ, ಪ್ಲಾಸ್ಟಿಕ್ ಹಾಗೂ ಕಟ್ಟಡ ತ್ಯಾಜ್ಯವನ್ನು ತೆರವುಗೊಳಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದಂತೆ, ಶನಿವಾರ ಬೆಳಿಗ್ಗೆ 6.30ರಿಂದ ಮಹಾನಗರ ಪಾಲಿಕೆ ಆಯುಕ್ತೆ ಸವಿತಾ ಎಂ.ಕೆ. ಹಾಗೂ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೂಪ ಬಿ.ಆರ್. ಅವರ ನೇತೃತ್ವದಲ್ಲಿ ಸ್ವಚ್ಚತಾ ಕಾರ್ಯಾಚರಣೆ ನಡೆಸಲಾಯಿತು.
ಪಾಲಿಕೆ ಅಧಿಕಾರಿಗಳು, ಸುತ್ತಮುತ್ತಲಿನ ನಗರ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿ ಹಾಗೂ ಪೌರಕಾರ್ಮಿಕರು ಅಭಿಯಾನದಲ್ಲಿ ಪಾಲ್ಗೊಂಡು ರಿಂಗ್ ರೋಡ್‌ನ ವಿವಿಧ ಭಾಗಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು. ಆಯುಕ್ತೆ ಸವಿತಾ ಅವರು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ರಸ್ತೆ ಬದಿಗಳಲ್ಲಿ ಅನಧಿಕೃತವಾಗಿ ತ್ಯಾಜ್ಯ ಸುರಿಯುವುದನ್ನು ತಡೆಯಲು ಹಾಗೂ ಸ್ವಚ್ಛತೆ ನಿರಂತರವಾಗಿ ಕಾಪಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಿಂಗ್ ರೋಡ್ ನಲ್ಲಿ ಕಸ ಸುರಿದು ನಗರದ ಹೊರವಲಯದ ಸೌಂದರ್ಯ ಹಾಳು ಮಾಡಬೇಡಿ” ಎಂದು ಮಹಾನಗರ ಪಾಲಿಕೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ದಸರಾಕ್ಕೆ ಲಕ್ಷಾಂತರ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದ್ದು, ಮೈಸೂರನ್ನು ಸ್ವಚ್ಛ ಹಾಗೂ ಸುಂದರ ನಗರವನ್ನಾಗಿ ಉಳಿಸಿಕೊಳ್ಳಲು ನಾಗರಿಕರ ಸಹಕಾರ ಅಗತ್ಯ ಎಂದು ತಿಳಿಸಿದೆ.
Key words: Mysore dasara, Dumping, garbage, Ring Road, cleanliness






