8 ಶಂಕಿತ ಉಗ್ರರ ವಿರುದ್ದ ಚಾರ್ಜ್ ಶೀಟ್ ಸಲ್ಲಿಸಿದ ಎನ್ ಐಎ.

ಬೆಂಗಳೂರು, ಜನವರಿ 13,2024(www.justkannada.in): ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ವಿಧ್ವಂಸಕ ಕೃತ್ಯ ಮತ್ತು ಆತ್ಮಾಹುತಿ ದಾಳಿ ಎಸಗಲು ಸಂಚು ರೂಪಿಸಿದ್ದ ಆರೋಪದ ಮೇಲೆ 8 ಶಂಕಿತ ಉಗ್ರರ ವಿರುದ್ದ ಕೋರ್ಟ್ ಗೆ ರಾಷ್ಟ್ರೀಯ ತನಿಖಾದಳ(NIA) ಚಾರ್ಜ್ ಶೀಟ್ ಸಲ್ಲಿಸಿದೆ.

8 ಮಂದಿಯಲ್ಲಿ 6 ಮಂದಿಯನ್ನ ಬಂಧಿಸಲಾಗಿದ್ದು, ಇನ್ನೂ ಇಬ್ಬರು ಉಗ್ರರು ತಲೆ ಮರೆಸಿಕೊಂಡಿದ್ದಾರೆ ಎಂದು ಚಾರ್ಜ್​ಶೀಟ್​ ನಲ್ಲಿ ಉಲ್ಲೇಖಿಸಲಾಗಿದೆ. ಇವರ ವಿರುದ್ಧ ಉಗ್ರವಾದಕ್ಕೆ ಪಿತೂರಿ, ಆತ್ಮಾಹುತಿ ದಾಳಿ ನಡೆಸಲು ಯೋಜನೆ ರೂಪಿಸಿರುವ ಆರೋಪವಿದೆ.

ನಾಸೀರ್, ಸುಹೇಲ್  ಖಾನ್, ಮೊಹಮ್ಮದ್ ಉಮರ್, ಝಹೀದ್ ತಬ್ರೇಜ್, ಸೈಯದ್ ಮುದಾಸಿರ್ ಮತ್ತು ಫೈಸಲ್ ರಬ್ಬಾನಿ ಸೇರಿ 8 ಶಂಕಿತ ಉಗ್ರರ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಕೇರಳ ಮೂಲದ ನಸೀರ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ. ಇಬ್ಬರು ಉಗ್ರರಾದ ಜುನೈದ್ ಅಹ್ಮದ್ ಮತ್ತು ಸಲ್ಮಾನ್ ಖಾನ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಇನ್ನು ಕಳೆದ ಜುಲೈ 19ರಂದು ಬೆಂಗಳೂರಲ್ಲಿ ಬಂಧಿತರಾಗಿದ್ದ ಸೈಯದ್ ಸುಹೇಲ್ ಖಾನ್, ಮೊಹಮ್ಮದ್ ಉಮರ್, ಝಹೀದ್ ತಬ್ರೇಜ್, ಸೈಯದ್ ಮುದಾಸಿರ್ ಮತ್ತು ಫೈಸಲ್ ರಬ್ಬಾನಿ ಹೆಸರುಗಳನ್ನು ಚಾರ್ಜ್‌ ಶೀಟ್‌ನಲ್ಲಿದೆ. ಇವರೆಲ್ಲರ ವಿರುದ್ಧ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ, ಸ್ಫೋಟಕಗಳ ಸಾಗಣೆ ಕಾಯ್ದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Key words: NIA -filed -charge sheet –against- 8 suspected- terrorists