ಕಾವೇರಿ ನೀರು ಬಿಡುಗಡೆಗೆ ಆದೇಶ ಹಿನ್ನೆಲೆ: ಸುಪ್ರೀಂ ಕೋರ್ಟ್ ಗೆ ಅರ್ಜಿ, ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ ತೆರಳಲು ತೀರ್ಮಾನ- ಸಿಎಂ ಸಿದ‍್ಧರಾಮಯ್ಯ.

ಬೆಂಗಳೂರು,ಸೆಪ್ಟಂಬರ್,13,2023(www.justkannada.in): ಸಂಕಷ್ಟದ ಪರಿಸ್ಥಿತಿಯಲ್ಲೂ ಮತ್ತೆ ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶಿಸಿರುವ ಹಿನ್ನೆಲೆ , ಕಾವೇರಿ ನೀರು ನಿಯಂತ್ರಣ ಸಮಿತಿಗೆ ಮತ್ತೊಂದು ಅರ್ಜಿ ಸಲ್ಲಿಸಲಾಗುವುದು. ಜೊತೆಗೆ ಸುಪ್ರೀಂ ಕೋರ್ಟಿನಲ್ಲಿಯೂ ಅರ್ಜಿ ಸಲ್ಲಿಸುತ್ತೇವೆ ಎಂದು ಸಿಎಂ ಸಿದ‍್ಧರಾಮಯ್ಯ ತಿಳಿಸಿದರು.

ಸರ್ವ ಪಕ್ಷ ಸಭೆಯ ಬಳಿಕ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಸರ್ವಪಕ್ಷಗಳ ಸಭೆ ಕರೆಯಲು ತೀರ್ಮಾನಿಸಲಾಯಿತು. ತುರ್ತಾಗಿ ಆಯೋಜನೆಯಾದ ಈ ಸಭೆಗೆ ಕೆಲವರು ಪೂರ್ವನಿರ್ಧಾರಿತ ಕಾರ್ಯಕ್ರಮಗಳ ಕಾರಣ ಬರಲು ಸಾಧ್ಯವಾಗಿಲ್ಲ. ಕಾವೇರಿ ನೀರು ನಿಯಂತ್ರಣ ಸಮಿತಿಗೆ ಮತ್ತೊಂದು ಅರ್ಜಿ ಸಲ್ಲಿಸಲಾಗುವುದು. ಸುಪ್ರೀಂ ಕೋರ್ಟಿನಲ್ಲಿಯೂ ಅರ್ಜಿ ಸಲ್ಲಿಸಲಾಗುವುದು. ಅಲ್ಲಿಯೂ ವಾಸ್ತವಾಂಶ ತಿಳಿಸುವ ಕೆಲಸ ಮಾಡಲಾಗುವುದು. ಈಗ 5,000 ಕ್ಯೂಸೆಕ್ಸ್‌ ನೀರು ಬಿಡುಗಡೆ ಮಾಡುವ ಬಗ್ಗೆ ಹಾಗೂ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು ದೆಹಲಿಗೆ ತೆರಳಿ ವಕೀಲರ ತಂಡದೊಂದಿಗೆ ಚರ್ಚಿಸಲಿದ್ದಾರೆ ಎಂದರು.

ಹಾಗೆಯೇ ಸರ್ವಪಕ್ಷ ನಿಯೋಗ ತೆರಳಲು ಅನುವು ಮಾಡಿಕೊಡುವಂತೆ ಪ್ರಧಾನಮಂತ್ರಿಯವರ ಸಮಯ ಕೇಳಿ ಮತ್ತೊಮ್ಮೆ ಪತ್ರ ಬರೆಯಲಾಗುವುದು. ಸಂಸದರೂ ಹೋರಾಟ ಮಾಡುವ ಭರವಸೆ ನೀಡಿದ್ದಾರೆ.  ಸೆಪ್ಟಂಬರ್ 18 ರಿಂದ ಸಂಸತ್‌ ಅಧಿವೇಶನ ಪ್ರಾರಂಭವಾಗಲಿದ್ದು, ಈ ಸಂದರ್ಭದಲ್ಲಿ ಕೇಂದ್ರ ಸಚಿವರು ಹಾಗೂ ಸಂಸದರೊಂದಿಗೆ ದೆಹಲಿಯಲ್ಲಿ ಸಭೆ ನಡೆಸಿ ಚರ್ಚಿಸಿ, ದೇಶದ ಗಮನ ಸೆಳೆಯಲಾಗುವುದು. ಇದಕ್ಕೆ ಎಲ್ಲರೂ ಸಹಮತಿ ಸೂಚಿಸಿದ್ದಾರೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದರು.

Key words: order – release – Cauvery water-Petition – Supreme Court- CM Siddhiramaiah