ಕರಾವಳಿಗೆ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್: ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕ್ರಮ- ಪರಮೇಶ್ವರ್

ಬೆಂಗಳೂರು, ಮೇ 3,2025 (www.justkannada.in): ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ಇಂದು ಸಭೆ ನಡೆಸಿದ ಗೃಹ ಸಚಿವ ಪರಮೇಶ್ವರ್ ಮಾತನಾಡಿ, ಕರಾವಳಿಗೆ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಆರಂಭಿಸಲಾಗುವುದು. ಹಾಗೆಯೇ ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇಂದು ಮಂಗಳೂರಿನ ಸರ್ಕಿಟ್ ಹೌಸ್ ನಲ್ಲಿ ಮುಸ್ಲೀಂ ಮುಖಂಡರ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್  ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗೆ ಸೀಮಿತವಾಗಿ ಪ್ರತ್ಯೇಕವಾಗಿ ಆಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಆರಂಭಿಸಲಾಗುವುದು. ಕೋಮು ಗಲಭೆಗೆ ಕಾರಣವಾಗುವ ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕೂಡ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಕೇರಳ ಮೂಲದ ಅಶ್ರಫ್ ಹತ್ಯೆ ಪ್ರಕರಣದಲ್ಲಿ ಈಗಾಗಲೇ 21 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಆಗಲಿದೆ. ಯಾವುದೇ ಸಮುದಾಯದವರು ಆಗಲೀ, ಕಾನೂನು ಉಲ್ಲಂಘನೆ ಮಾಡಲು ಬಿಡುವುದಿಲ್ಲ. ಶಾಂತಿ ಸುವ್ಯವಸ್ಥೆ ಹಾಳು ಮಾಡಲು ಬಿಡುವುದಿಲ್ಲ ಎಂದು ಪರಮೇಶ್ವರ್ ತಿಳಿಸಿದರು.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧಪಟ್ಟ 8 ಮಂದಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಕರಾವಳಿ ಜಿಲ್ಲೆಗಳಲ್ಲಿ ಕೋಮುಗಲಭೆ ನಡೆಯುವ ನಿಟ್ಟಿನಲ್ಲಿ ಐಜಿ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಆಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಎರಡು ವಾರಗಳಲ್ಲಿ ಆರಂಭವಾಗಲಿದೆ ಎಂದು ಪರಮೇಶ್ವರ್ ಮಾಹಿತಿ ನೀಡಿದರು.

Key words: Anti-Communal Task Force, Home Minister, Parameshwar