ಪೋಕ್ಸೋ ಪ್ರಕರಣ: ವಿಚಾರಣೆಗೆ ಹಾಜರಾದ ಮಾಜಿ ಸಿಎಂ ಬಿಎಸ್ ವೈ

ಬೆಂಗಳೂರು, ಜೂನ್,17,2024 (www.justkannada.in):  ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಇಂದು ಸಿಐಡಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.

ಪ್ರಕರಣ ತನಿಖೆ ನಡೆಸುತ್ತಿದ್ದ ಡಿವೈಎಸ್ಪಿ ಪೃಥ್ವಿ ಬದಲಿಗೆ ತನಿಖಾಧಿಕಾರಿಯಾಗಿ ನೇಮಕಗೊಂಡಿರುವ ಡಿವೈಎಸ್ಪಿ ಪುನೀತ್  ಎದುರು ಮಾಜಿ ಸಿಎಂ ಬಿಎಸ್​​ವೈ ಹಾಜರಾಗಿ ವಿಚಾರಣೆ ಎದುರಿಸುತ್ತಿದ್ದಾರೆ.  ಅಪ್ರಾಪ್ತ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಸಂತ್ರಸ್ತೆ ತಾಯಿ ಮಾರ್ಚ್​ 3ರಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ದ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.  ಈ ಬಗ್ಗೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು , ಪ್ರಕರಣ ಕುರಿತು ಸಿಐಡಿ ತನಿಖೆ ನಡೆಸುತ್ತಿದೆ.

ಈ ಮಧ್ಯೆ ವಿಚಾರಣೆಗೆ ಹಾಜರಾಗುವಂತೆ ಬಿಎಸ್ ಯಡಿಯೂರಪ್ಪಗೆ  ಸಿಐಡಿ ಅಧಿಕಾರಿಗಳು 2 ಬಾರಿ ನೋಟಿಸ್​ ನೀಡಿದ್ದರು. ಆದರೆ ವಿಚಾರಣೆಗೆ ಅವರು ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ವಿರುದ್ಧ ಬಂಧನ ವಾರಂಟ್ ಹೊರಡಿಸುವಂತೆ ಕೋರಿ ನಗರದ 1ನೇ ತ್ವರಿತಗತಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿದ ನ್ಯಾಯಪೀಠ ಬಿಎಸ್​ವೈ ಜಾಮೀನು ರಹಿತ ವಾರಂಟ್  ಜಾರಿ ಮಾಡಿತ್ತು.

ಈ ಮಧ್ಯೆ ಪ್ರಕರಣವನ್ನ ರದ್ದುಕೋರಿ ಬಿಎಸ್ ಯಡಿಯೂರಪ್ಪ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.  ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ​​ ಬಿಎಸ್ ಯಡಿಯೂರಪ್ಪರನ್ನು ಬಂಧಿಸದಂತೆ ನಿರ್ದೆಶನ ನೀಡಿತ್ತು. ಅಲ್ಲದೆ ಜೂನ್ 17 ರಂದು ವಿಚಾರಣೆಗೆ ಹಾಜರಾಗುವಂತೆ ಬಿಎಸ್ ಯಡಿಯೂರಪ್ಪಗೆ ಕೋರ್ಟ್ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಿಐಡಿ ಅಧಿಕಾರಿಗಳ ಮುಂದೆ ಬಿಎಸ್ ವೈ ವಿಚಾರಣೆಗೆ ಹಾಜರಾಗಿದ್ದಾರೆ.

Key words: POCSO, case, BSY, attend, hearing