ಮೀಸಲಾತಿ ವಿಚಾರದಲ್ಲಿ ಸರ್ಕಾರ ಮಾಡುತ್ತಿರುವ ಮೋಸ ಖಂಡಿಸಿ ನಾಳೆ ರಾಜಭವನದ ಬಳಿ ಪ್ರತಿಭಟನೆ- ಡಿ.ಕೆ ಶಿವಕುಮಾರ್.

ಬೆಂಗಳೂರು,ಮಾರ್ಚ್,23,2023(‌www.justkannada.in):  ಮೀಸಲಾತಿ ಹೆಚ್ಚಳ ಕುರಿತ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸದೇ, ಸಂವಿಧಾನದ 9ನೇ ಶೆಡ್ಯುಲ್ ನಲ್ಲಿ ಸೇರಿಸದೇ ಬಿಜೆಪಿ ಸರ್ಕಾರ ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಸಮುದಾಯದ ಜನರ ಕಿವಿಗೆ ಹೂವ ಇಟ್ಟು, ಮೋಸ ಮಾಡುತ್ತಿದೆ. ಮೀಸಲಾತಿ ವಿಚಾರದಲ್ಲಿ ಈ ಮೋಸವನ್ನ ಖಂಡಿಸಿ ನಾಳೆ ರಾಜಭವನದ ಬಳಿ ಪ್ರತಿಭಟನೆ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಡಿ.ಕೆ ಶಿವಕುಮಾರ್, ಮೀಸಲಾತಿ ವಿಚಾರದಲ್ಲಿ ರಾಜ್ಯ ಬಿಜೆಪಿ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ.  ಈ ಸರ್ಕಾರ ಪ್ರಸ್ತಾವನೆ ಸಲ್ಲಿಸದೇ. ಸಂಸತ್ತಿನಲ್ಲಿ ಸಂವಿಧಾನದ 9ನೇ ಶೆಡ್ಯುಲ್ ನಲ್ಲಿ ಸೇರಿಸದೆ ಮೀಸಲಾತಿ ಮಾಡಿದ್ದೇವೆ ಎಂದು ಹೇಳಿಕೊಂಡು ಎಸ್.ಸಿ ಮತ್ತು ಎಸ್.ಟಿ ಸಮುದಾಯಕ್ಕೆ ಮೋಸ ಮಾಡುತ್ತಿದೆ. ಹೀಗಾಗಿ ನಾಳೆ ಬೆಳಗ್ಗೆ 10 ಗಂಟೆಗೆ ರಾಜಭವನದ ಮುಂದೆ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ ಎಂದರು.

ನಮ್ಮ ಪಕ್ಷದ ನಾಯಕರೆಲ್ಲರೂ ರಾಜ್ಯಪಾಲರ ಭೇಟಿಗೆ ತೀರ್ಮಾನಿಸಿದ್ದು, ನಾಳೆ ಬೆಳಿಗ್ಗೆ ಭೇಟಿಗೆ ರಾಜ್ಯಪಾಲರ ಬಳಿ ಸಮಯಾವಕಾಶ ಕೇಳುತ್ತೇವೆ. ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ನಾಯಕರು ಹಾಗೂ ಬೇರೆ ಸಮುದಾಯದ ನಾಯಕರುಗಳು ಭಾಗವಹಿಸಬೇಕು ಎಂದು ಆಹ್ವಾನಿಸುತ್ತಿದ್ದೇನೆ. ಜನರನ್ನು ನಂಬಿಸಿ ಮೋಸ ಮಾಡಿರುವ ಈ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯಲು ಯಾವುದೇ ನೈತಿಕತೆ ಇಲ್ಲ. ಹೀಗಾಗಿ ರಾಜ್ಯಪಾಲರು ಈ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಡಿ.ಕೆ ಶಿವಕುಮಾರ್ ಆಗ್ರಹಿಸಿದರು.

Key words: Protest – tomorrow –congress -condemn – government- cheating – DK Shivakumar