ಬರವಿದ್ದಾಗ ಊಟಿಯಲ್ಲಿ ಔಟಿಂಗ್, ಅಕಾಲಿಕ ಮಳೆ ಆದಾಗ ಡಿನ್ನರ್ ಮೀಟಿಂಗ್: ಸರ್ಕಾರದ ವಿರುದ್ದ ಆರ್​. ಅಶೋಕ್ ವಾಗ್ದಾಳಿ.

ಬೆಂಗಳೂರು,ಮೇ,23,2024 (www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಬರವಿದ್ದಾಗ ಊಟಿಯಲ್ಲಿ ಔಟಿಂಗ್, ಅಕಾಲಿಕ ಮಳೆ ಆದಾಗ ಡಿನ್ನರ್ ಮೀಟಿಂಗ್ ಎಂದು ವ್ಯಂಗ್ಯವಾಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಆರ್.ಅಶೋಕ್,  ‘ಮೈಸೂರು, ಚಿತ್ರದುರ್ಗ, ತುಮಕೂರು, ಚಾಮರಾಜನಗರ, ಚಿಕ್ಕಮಗಳೂರು, ಧಾರವಾಡ, ವಿಜಯಪುರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕಾಲಿಕ ಮಳೆಯಿಂದ ಅಪಾರ ಬೆಳೆ, ಆಸ್ತಿ-ಪಾಸ್ತಿ ಹಾನಿಯಾಗಿ ರೈತರು, ಸಾರ್ವಜನಿಕರು ಕಂಗಾಲಾಗಿದ್ದಾರೆ. ಆದರೆ ಒಂದೆರಡು ಜಿಲ್ಲೆಗಳಲ್ಲಿ ಬಿಟ್ಟರೆ ಬೇರೆ ಯಾವ ಜಿಲ್ಲೆಗಳಲ್ಲೂ ಉಸ್ತುವಾರಿ ಸಚಿವರು ಈವರೆಗೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವ ಗೋಜಿಗೇ ಹೋಗಿಲ್ಲ’ ಎಂದು ಹರಿಹಾಯ್ದಿದ್ದಾರೆ.

‘ಈ ದರಿದ್ರ ಕಾಂಗ್ರೆಸ್​ ಸರ್ಕಾರದಲ್ಲಿ ಒಬ್ಬರು ಕುರ್ಚಿ ಉಳಿಸಿಕೊಳ್ಳಲು ತಂತ್ರ ಹೆಣೆಯುತ್ತಿದ್ದರೆ, ಇನ್ನೊಬ್ಬರು ಕುರ್ಚಿ ಕಿತ್ತುಕೊಳ್ಳಲು ಕತ್ತಿ ಮಸಿಯುತ್ತಿದ್ದಾರೆ. ಇವರಿಬ್ಬರ ನಡುವೆ ಆತಂತ್ರವಾಗಿರುವ ಮಂತ್ರಿಗಳು ಅವರವರ ಅಸ್ತಿತ್ವ ಉಳಿಸಿಕೊಳ್ಳಲು ಡಿನ್ನರ್ ಮೀಟಿಂಗ್, ಸೀಕ್ರೆಟ್ ಸಭೆ ಮಾಡಿ ಕಾಲಹರಣ ಮಾಡುತ್ತಿದ್ದಾರೆ.

‘ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ ಇವೆಲ್ಲದರ ನಡುವೆ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದು ಜನರ ಕಷ್ಟ ಕೇಳಲು ಸರ್ಕಾರವೇ ಇಲ್ಲದಂತಾಗಿದೆ. ಒಟ್ಟಿನಲ್ಲಿ ಈ ಅಧಿಕಾರದಾಹಿ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಕನ್ನಡಿಗರಿಗೆ ನೆಮ್ಮದಿಯಿಲ್ಲ ಎಂದು ಆರ್.ಅಶೋಕ್ ಕಿಡಿಕಾರಿದ್ದಾರೆ.

Key words: R. Ashok, attacked, Congress, government