ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ರೈತರಿಗೂ ಸಂಕಷ್ಟ- ಸರ್ಕಾರದ ವಿರುದ್ದ ಕುರುಬೂರು ಶಾಂತಕುಮಾರ್ ಆಕ್ರೋಶ.

ಮೈಸೂರು,ಜೂನ್,18,2024 (www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿರುವುದಕ್ಕೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಸರ್ಕಾರಿ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುರುಬೂರು ಶಾಂತಕುಮಾರ್, ರಾಜ್ಯ ಸರ್ಕಾರ ವೋಟ್ ಬ್ಯಾಂಕ್ ದೃಷ್ಟಿಯಿಂದ ಆಕರ್ಷಕ ಯೋಜನೆಗಳನ್ನು ಜಾರಿಗೊಳಿಸಿತು. ಇದೀಗ ಹಣ ಹೊಂದಿಸಲು ಪ್ರತಿಯೊಂದು ವಸ್ತುವಿನ ಬೆಲೆ ಹೆಚ್ಚಳ ಮಾಡಿದೆ. ಇದರಿಂದ ಜನರಿಗೆ ತೊಂದರೆಯಾಗಿದೆ. ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚಳದಿಂದ ರೈತರಿಗೂ ಸಂಕಷ್ಟ ಎದುರಾಗಿದೆ ಎಂದು ಕಿಡಿಕಾರಿದರು.

ಪೆಟ್ರೋಲ್ ಡೀಸೆಲ್  ಬೆಲೆ ಏರಿಕೆಯಿಂದ ಆಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಲಿದೆ. ಇದೇ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಬೆಲೆ ಹೆಚ್ಚಳ ಮಾಡಿದಾಗ ಟೀಕಿಸಿದ್ದರು. ಇದೀಗ ಏಕಾಏಕಿ ಇಂಧನ ಬೆಲೆ ಹೆಚ್ಚಳ ಮಾಡಿದ್ದಾರೆ. ಸಿದ್ದರಾಮಯ್ಯ ಅನ್ಯ ರಾಜ್ಯಗಳಿಗೆ ಹೋಲಿಕೆ ಮಾಡುವುದನ್ನು ನಿಲ್ಲಿಸಬೇಕು. ರೈತರಿಗೆ ನೀಡುತ್ತಿದ್ದ ಕಿಸಾನ್ ಸಮ್ಮಾನ್ ಹಣ, ಹಾಲಿನ ಬಾಕಿ ಹಣವನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಿದೆ. ರಾಜ್ಯ ಸರ್ಕಾರ ರೈತ ವಿರೋಧಿ ನಿಲುವು ತಳೆದಿದೆ ಎಂದು ಕುರುಬೂರು ಶಾಂತಕುಮಾರ್  ವಾಗ್ದಾಳಿ ನಡೆಸಿದರು.

ರೈತರ ಪ್ರತಿಭಟನೆಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ.

ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಕಳೆದ ಎರಡೂವರೆ ವರ್ಷಗಳಿಂದ ದೆಹಲಿಯಲ್ಲಿ ರೈತರು ಪ್ರತಿಭಟನೆ ಮಾಡುತ್ತಿದ್ದರೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ರೈತರು ನಡೆಸುತ್ತಿರುವ ಹೋರಾಟಕ್ಕೆ ಪಶ್ಚಿಮಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ್ದಾರೆ. ದಕ್ಷಿಣ ಭಾರತದಲ್ಲೂ ಹೋರಾಟವನ್ನು ಬಲಗೊಳಿಸಲು ತೀರ್ಮಾನಿಸಲಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾದಿಂದ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಬಿಹಾರ ಸಿಎಂ ನಿತೀಶ್ ಕುಮಾರ್ ರನ್ನು ಈ ತಿಂಗಳಾಂತ್ಯದಲ್ಲಿ ಭೇಟಿ ಮಾಡಿ ರೈತರ ಹೋರಾಟ ಕುರಿತು ಮನವರಿಕೆ ಮಾಡಲಾಗುತ್ತದೆ. ಆ ಬಳಿಕ ಕಾಂಗ್ರೆಸ್ ನ ಪ್ರಮುಖ ‌ನಾಯಕರ‌ನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಗುವುದು. ಆ ಮೂಲಕ ರೈತರ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಹೇಳಿದರು.

Key words: rise, petrol, diesel, prices, Kuruburu Shanthakumar