ಮಣ್ಣಲ್ಲಿ ಮಣ್ಣಾದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ

ಬೆಂಗಳೂರು,ನವೆಂಬರ್,15,2025 (www.justkannada.in): ಪದ್ಮಶ್ರೀ ಪುರಸ್ಕೃತೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಬೆಂಗಳೂರಿನಲ್ಲಿ ನಡೆಯಿತು.

ಇಂದು ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾನಿಲಯ ಸಮೀಪ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಸಾಲುಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆ ನೆರವೇರಿತು.

ದೀರ್ಘ ಕಾಲದ ಅನಾರೋಗ್ಯದಿಂದ ನಿನ್ನೆ ಖಾಸಗಿ ಆಸ್ಪತ್ರೆಯಲ್ಲಿ ಸಾಲು ಮರದ ತಿಮ್ಮಕ್ಕ ನಿಧನರಾಗಿದ್ದು. ಈ ಮೊದಲು ಅವರು ವಾಸಿಸುತ್ತಿದ್ದ ಬೇಲೂರಿಗೆ ಪಾರ್ಥಿವ ಶರೀರವನ್ನು ನಿನ್ನೆ ತೆಗೆದುಕೊಂಡು ಹೋಗಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಇಂದು ಬೆಳಗ್ಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ಅರಣ್ಯ ಸಚಿವ ಈಶ್ವರ್‌ ಖಂಡ್ರೆ, ಕೇಂದ್ರ ಸಚಿವ ವಿ. ಸೋಮಣ್ಣ, ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಅನೇಕ ಗಣ್ಯರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿದ್ದು, ಪೊಲೀಸರು 3 ಸುತ್ತು ಕುಶಾಲತೋಪು ಸಿಡಿಸಿ ಗೌರವ ಸಲ್ಲಿಸಿದರು.

Key words: Funeral, Saulamarada Thimmakka, Bangalore