ಚಾಮುಂಡಿಬೆಟ್ಟಕ್ಕೆ ಪ್ರತ್ಯೇಕ ಪ್ರಾಧಿಕಾರ ಸ್ವಾಗತಾರ್ಹ:  ಅಲ್ಲಿನ ಅನಧಿಕೃತ ನಿವಾಸಿಗಳ ತೆರವುಗೊಳಿಸಿ- ಸಂಸದ ಪ್ರತಾಪ್ ಸಿಂಹ.

ಮೈಸೂರು,ಜುಲೈ,18,2023(www.justkannada.in): ಚಾಮುಂಡಿಬೆಟ್ಟಕ್ಕೆ ಪ್ರತ್ಯೇಕ ಪ್ರಾಧಿಕಾರ ಮಾಡಿರುವುದು ಸ್ವಾಗತಾರ್ಹ. ಹಾಗೆಯೇ  ಚಾಮುಂಡಿ ಬೆಟ್ಟದಲ್ಲಿರುವ ಅನಧಿಕೃತ ನಿವಾಸಿಗಳ ತೆರವುಗೊಳಿಸಬೇಕು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಬೆಟ್ಟದ ಮೂಲ ನಿವಾಸಿಗಳ ಹೊರತುಪಡಿಸಿ ಉಳಿದವರಿಗೆ ಅಲ್ಲಿ ನೆಲೆಸಲು ಅವಕಾಶ ಮಾಡಿಕೊಡಬಾರದು. ಎಲ್ಲಿಂದಲೋ ಬಂದು ಇಲ್ಲಿ ಆಸ್ತಿ ಮಾಡಿಕೊಂಡು ನೆಲೆಸುತಿದ್ದಾರೆ. ಚಾಮುಂಡಿ ಬೆಟ್ಟದ ಪಾವಿತ್ಯ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಇದಕ್ಕೆಲ್ಲ ಅವಕಾಶ ಕೊಡಬಾರದು ಎಂದು ಹೇಳಿದರು.

ಚಾಮುಂಡಿಬೆಟ್ಟಕ್ಕೆ ಪ್ರತ್ಯೇಕ ಪ್ರಾಧಿಕಾರ ಮಾಡಿರುವುದು ಸ್ವಾಗತಾರ್ಹ. ಈಗಾಗಲೇ ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಚಾಮುಂಡಿ ಬೆಟ್ಟದ ಅಭಿವೃದ್ಧಿಗೆ 45 ಕೋಟಿ ಅನುದಾನ ಬಂದಿದೆ. ಹೀಗಾಗಿ ಚಾಮುಂಡಿ ಬೆಟ್ಟದ ಮೇಲ್ಬಾಗದಲ್ಲಿ ಪಾವಿತ್ಯ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಬೇಕಿದೆ. ದೇಗುಲದ ಮುಂಭಾಗದಲ್ಲಿ ಮಂಟಪವನ್ನು ಕಟ್ಟುವ ಅಗತ್ಯವಿರಲಿಲ್ಲ. ಬೆಟ್ಟದ ಮೇಲ್ಬಾಗದಲ್ಲಿ ಬೆಂಗಳೂರಿನ ಕೆಲವರು ಆಸ್ತಿ ಮಾಡಿಕೊಂಡಿದ್ದಾರೆ. ಸಬ್ ಲೀಸ್ ಮೂಲಕ ವ್ಯವಹಾರ ‌ನಡೆಸುತ್ತಿದ್ದಾರೆ. ಹೀಗಾಗಿ ಬೆಟ್ಟಕ್ಕೆ ಸಂಬಂಧಪಡದವರನ್ನು ಅಲ್ಲಿಂದ ತೆರವುಗೊಳಿಸಬೇಕು. ದೇವಾಲಯದ ಅರ್ಚಕ ಸಮುದಾಯ ಹಾಗೂ ನಾಯಕ ಸಮುದಾಯಕ್ಕೆ ಸೇರಿದ ಮೂಲ ನಿವಾಸಿಗಳನ್ನು ಹೊರತುಪಡಿಸಿ ಇತ್ತೀಚೆಗೆ ಎಲ್ಲಿಂದಲೋ‌ ಬಂದು ಬೆಟ್ಟದಲ್ಲಿ ನೆಲೆಸಿರುವವರನ್ನು ತೆರವುಗೊಳಿಸಬೇಕು. ಚಾಮುಂಡಿ ಬೆಟ್ಟದ ಮೇಲ್ಬಾಗದಲ್ಲಿ ಹೊಸ ಕಟ್ಟಡಗಳು ನಿರ್ಮಾಣವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಾಪ್ ಸಿಂಹ ತಿಳಿಸಿದರು.

ದಸರಾ ಆಚರಣೆಗೂ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕಿತ್ತು.

ಚಾಮುಂಡಿ ಬೆಟ್ಟದ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ಮಾಡಿದಂತೆ ದಸರಾ ಆಚರಣೆಗೂ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕಿತ್ತು. ಬಹಳ ವರ್ಷಗಳಿಂದ ದಸರಾ ಪ್ರಾಧಿಕಾರ ರಚನೆ ಮಾಡಬೇಕೆಂಬ ಕೂಗು ಕೇಳಿ ಬರುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲೂ ಇದಕ್ಕೆ ಸಾಕಷ್ಟು ಪ್ರಯತ್ನಗಳನ್ನು ಮಾಡಲಾಯಿತು. ಈಗಿನ ಸರ್ಕಾರವಾದರೂ ದಸರಾ ಪ್ರಾಧಿಕಾರ ರಚನೆ ಮಾಡಬೇಕಿತ್ತು ಎಂದು  ಸಂಸದ‌ ಪ್ರತಾಪ್ ಸಿಂಹ  ಅಭಿಪ್ರಾಯ ವ್ಯಕ್ತಪಡಿಸಿದರು.

Key words:  separate -authority –Chamundi Hills- welcome – MP Pratap Simha