ಬೆಂಗಳೂರು,ಅಕ್ಟೋಬರ್,30,2026 (www.justkannada.in): ರಾಜ್ಯ ಸರ್ಕಾರವು ಐವರು ಐಎಎಸ್ ಅಧಿಕಾರಿಗಳ ವರ್ಗಾವಣೆ ಹಾಗೂ ಹುದ್ದೆ ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದು ಈ ಮೂಲಕ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದೆ.
ಈ ಕುರಿತು ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಅಧಿಕೃತ ಆದೇಶ ಹೊರಡಿಸಿದೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರಾಗಿದ್ದ ಸುರಳ್ಕರ್ ವಿಕಾಸ್ ಕಿಶೋರ್ ಅವರನ್ನು ಹಿಂದುಳಿದ ವರ್ಗಗಳ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.
ಕರ್ನಾಟಕ ಗೃಹ ಮಂಡಳಿಯ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿರುವ ಕೆ.ಎ. ದಯಾನಂದ್ ಅವರನ್ನು ಅದೇ ಹುದ್ದೆಯಲ್ಲಿ ಮುಂದುವರಿಸಲಾಗಿದೆ. 2013ನೇ ಬ್ಯಾಚ್ನ ಐಎಎಸ್ ಅಧಿಕಾರಿ ವೆಂಕಟ್ ರಾಜ್ ಅವರನ್ನು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರನ್ನಾಗಿ ನೇಮಕ ಮಾಡಲಾಗಿದ್ದು ಈ ಮೂಲಕ ಪಾಟೀಲ್ ಯಲಗೌಡ ಶಿವನಗೌಡ ಅವರ ಬಳಿ ಇದ್ದ ಹೆಚ್ಚುವರಿ ಪ್ರಭಾರವನ್ನು ಹಿಂಪಡೆಯಲಾಗಿದೆ.
ಕಲಬುರಗಿ ನಗರ ಪಾಲಿಕೆ ಆಯುಕ್ತರಾಗಿದ್ದ ಐಎಎಸ್ ಅಧಿಕಾರಿ ಶಿಂಧೆ ಅವಿನಾಶ್ ಸಂಜೀವನ್ ಅವರನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಜೊತೆಗೆ ಕಲಬುರಗಿಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರ ಹುದ್ದೆಯ ಹೆಚ್ಚುವರಿ ಪ್ರಭಾರವನ್ನ ಅವರಿಗೆ ವಹಿಸಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತರಾಗಿದ್ದ ಶಿಲ್ಪಾ ನಾಗ್ ಸಿ.ಟಿ. ಅವರನ್ನು ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಕೇಂದ್ರ ಸರ್ಕಾರದ ನಿಯೋಜನೆಗೆ ತೆರಳುತ್ತಿರುವ ಡಾ. ರಾಜೇಂದ್ರ ಕೆ.ವಿ. ಅವರನ್ನು ಈ ಸ್ಥಾನದಿಂದ ಬಿಡುಗಡೆ ಮಾಡಲಾಗಿದೆ.






