ಬೆಂಗಳೂರು,ಆಗಸ್ಟ್,4,2025 (www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಾಳೆ ಮುಷ್ಕರ ಕೈಗೊಂಡಿದ್ದು ಬೆಳಿಗ್ಗೆ 6 ಗಂಟೆಯಿಂದಲೇ ಮುಷ್ಕರ ಆರಂಭವಾಗಲಿದೆ. ಯಾವುದೇ ಸಾರಿಗೆ ನೌಕರರು ಬಸ್ ಓಡಿಸಲ್ಲ ಎಂದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಸ್ಪಷ್ಟಪಡಿಸಿದ್ದಾರೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಭೆ ನಡೆಸಿ ಮುಷ್ಕರ ವಾಪಸ್ ಗೆ ಮನವಿ ಮಾಡಿದರು. ಸಾರಿಗೆ ನಿಗಮದ ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಈಗಾಗಲೇ ಕೆಲವು ಸುತ್ತಿನ ಸಭೆ ನಡೆಸಲಾಗಿದೆ. ಪರಸ್ಪರ ಮಾತುಕತೆ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿದೆ. ನಾಳೆ ಕರೆದಿರುವ ಚಳವಳಿಯನ್ನು ವಾಪಾಸು ಪಡೆಯುವಂತೆ ಸಿಎಂ ಸಿದ್ದರಾಮಯ್ಯ ಅವರು ಮನವಿ ಮಾಡಿದರು.
2016ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ವೇತನ ಪರಿಷ್ಕರಣೆ ಮಾಡಿದ್ದೆ. ಆಗ ಶೇ. 12.5 ಹೆಚ್ಚಳ ಮಾಡಲಾಗಿತ್ತು. ಬಳಿಕ 2020 ರಲ್ಲಿ ಕೋವಿಡ್ ಕಾರಣಕ್ಕೆ ಅಂದಿನ ಸರ್ಕಾರ ವೇತನ ಪರಿಷ್ಕರಣೆ ಮಾಡಿಲ್ಲ. ದಿನಾಂಕ 01-03-23 ರಲ್ಲಿ ಹಿಂದಿನ ಸರ್ಕಾರ ಇದ್ದಾಗ ವೇತನ ಪರಿಷ್ಕರಣೆ ಒಪ್ಪಂದವಾಗಿತ್ತು. ಆಗ ಮೂಲವೇತನ 15 ಶೇಕಡಾ ಪರಿಷ್ಕರಣೆ ಮಾಡಲು ತೀರ್ಮಾನವಾಗಿತ್ತು. ಆಗ ನೀವು ಅದನ್ನು ಒಪ್ಪಿಕೊಂಡಿದ್ದೀರಿ.
ವೇತನ ಪರಿಷ್ಕರಣೆ ಕುರಿತಾಗಿ ಶ್ರೀನಿವಾಸ ಮೂರ್ತಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸಮಿತಿ ದಿನಾಂಕ 01-1-22 ರಿಂದ 28-2-23ರವರೆಗೆ ಬಾಕಿ ವೇತನ ಕೊಡಬಹುದು ಎಂದು ಶಿಫಾರಸು ಮಾಡಿತ್ತು. ಸಾರಿಗೆ ಸಂಘಟನೆಗಳ ಪ್ರತಿನಿಧಿಗಳು ಸಹ ಸಮಿತಿ ಮುಂದೆ ಹಾಜರಾಗಿ ಅಹವಾಲು ಸಲ್ಲಿಸಿದ್ದರು. ಶ್ರೀನಿವಾಸ ಸಮಿತಿಯ ಶಿಫಾರಸ್ಸು ಸರ್ಕಾರ ಒಪ್ಪಿಕೊಂಡಿದೆ. ನೀವು ಸಹ ಸದರಿ ಸಮಿತಿಯ ಶಿಫಾರಸುಗಳನ್ನು ಒಪ್ಪಿಕೊಳ್ಳಬೇಕು. ಮಿತಿಯ ಶಿಫಾರಸು ಆಧಾರದಲ್ಲಿ ಈ ಕುರಿತು ದಿನಾಂಕ 01-03-23 ರಿಂದ ಜಾರಿಗೆ ಬರುವಂತೆ ಅಂದಿನ ಸರ್ಕಾರ ಅಧಿಸೂಚನೆ ಸಹ ಹೊರಡಿಸಿತ್ತು. ಆದರೆ ಈಗ 38 ತಿಂಗಳ ಬಾಕಿ ವೇತನ ಪಾವತಿಗೆ ಬೇಡಿಕೆ ಇರಿಸಿರುವುದು ಸಮಂಜಸವಲ್ಲ ಎಂದು ಮುಖ್ಯಮಂತ್ರಿ ಅವರು ಹೇಳಿದರು.
ಆದರೆ ಸಿಎಂ ಸಿದ್ದರಾಮಯ್ಯ ಜೊತೆ ನಡೆದ ಸಭೆ ವಿಫಲವಾದ ಹಿನ್ನೆಲೆಯಲ್ಲಿ ನಾಳೆ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುವುದಾಗಿ ಸಾರಿಗೆ ಮುಖಂಡರು ತಿಳಿಸಿದರು. ಈ ಮಧ್ಯೆ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಸಲ್ಲಿಸಲಾಗಿದ ಪಿಐಎಲ್ ವಿಚಾರಣೆ ನಡೆಯಿತು. ಹೈಕೋರ್ಟ್ ವಿಭಾಗೀಯ ಪೀಠ ಒಂದು ದಿನದ ಮಟ್ಟಿಗೆ ಮುಷ್ಕರಕ್ಕೆ ಸ್ಥಗಿತಗೊಳಿಸಲು ಆದೇಶಿಸಿದೆ.
ಆದರೆ ಇದೀಗ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ನಾಳೆ ಮುಷ್ಕರ ನಡೆಸುವದಾಗಿ ತಿಳಿಸಿದ್ದಾರೆ. ನಾಳೆ ಬೆಳಿಗ್ಗೆ 6 ಗಂಟೆಯಿಂದ ಮುಷ್ಕರ ಆರಂಭವಾಗಲಿದೆ. ನಾಳೇ ಎಲ್ಲಾ ಬಸ್ ಗಳನ್ನು ಡಿಪೋದಲ್ಲಿ ನಿಲ್ಲಿಸುತ್ತೇವೆ. ಸರ್ಕಾರದ ಬೆದರಿಕೆಗೆ ಹೆದರಬೇಡಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ಎಂದು ಸಾರಿಗೆ ನೌಕರರಿಗೆ ಕರೆ ನೀಡಿದರು.
ನಾಳೆ ಯಾವುದೇ ನೌಕರರು ಬಸ್ ಗಳನ್ನ ಓಡಿಸಲ್ಲ. 4ನಿಗಮಗಳ ನೌಕರರು ಕರ್ತವ್ಯಕ್ಕೆ ಗೈರಾಗಿ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ . ಸರ್ಕಾರಕ್ಕೆ 38 ತಿಂಗಳ ಬಾಕಿ ಹಣ ನೀಡುವಂತೆ ಮನವಿ ಮಾಡಿದ್ದವು. ಬೇಕಿದ್ದರೆ ಕಂತಿನ ರೂಪದಲ್ಲಿ ಹಣವನ್ನ ನೀಡಬಹುದಿತ್ತು. ಆದರೆ ಸರ್ಕಾರ 12 ಬೇಡಿಕೆಗಳಲ್ಲಿ 2 ಬೇಡಿಕೆಯನ್ನಾದರೂ ಈಡೇರಿಸಬಹುದಿತ್ತು ಎಂದರು.
Key words: Transport, workers, Strike, tomorrow, Ananta Subbarao