ನವದೆಹಲಿ, ಜುಲೈ, 24,2026 (www.justkannada.in): ನೀಟ್ ಅಕ್ರಮ ಹೋರಾಟದ ಬಿಸಿ ಮಧ್ಯೆಯೇ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಸಿಹಿಸುದ್ದಿಯೊಂದನ್ನ ನೀಡಿದೆ. ಕರ್ನಾಟಕದ ಬಳ್ಳಾರಿ ಮತ್ತು ಆಂಧ್ರಪ್ರದೇಶದ ಗುಂತಕಲ್ ನಡುವೆ ಮೂರನೇ ಮತ್ತು ನಾಲ್ಕನೇ ರೈಲು ಮಾರ್ಗಗಳನ್ನು ನಿರ್ಮಿಸುವ 1,264 ಕೋಟಿ ವೆಚ್ಚದ ಬೃಹತ್ ಯೋಜನೆಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಸಂಪುಟದ ಆರ್ಥಿಕ ವ್ಯವಹಾರಗಳ ಸಮಿತಿಯು (CCEA) ಬಳ್ಳಾರಿ- ಗುಂತಕಲ್ ನಡುವಿನ ರೈಲು ಮಾರ್ಗಕ್ಕೆ ಅನುಮೋದನೆ ನೀಡಿದೆ.
ಕೇಂದ್ರ ಸಂಪುಟ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾತನಾಡಿ ಮಾಹಿತಿ ನೀಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಆಂಧ್ರಪ್ರದೇಶ ಮತ್ತು ಕರ್ನಾಟಕವನ್ನು ಸಂಪರ್ಕಿಸುವ 1,264 ಕೋಟಿ ರೂ. ವೆಚ್ಚದ ಬಳ್ಳಾರಿ-ಗುಂತಕಲ್ ರೈಲ್ವೆ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಕರ್ನಾಟಕ ಮತ್ತು ಆಂಧ್ರಪ್ರದೇಶದ ಒಟ್ಟು ಮೂರು ಜಿಲ್ಲೆಗಳಲ್ಲಿ ವ್ಯಾಪಿಸಿರುವ ಈ ಯೋಜನೆಯು ಭಾರತೀಯ ರೈಲ್ವೆ ಜಾಲವನ್ನು ಸುಮಾರು 46 ಕಿ.ಮೀ ನಷ್ಟು ವಿಸ್ತರಿಸಲಿದ್ದು, ಸುಮಾರು 7 ಲಕ್ಷ ಜನಸಂಖ್ಯೆ ಹೊಂದಿರುವ ಸುಮಾರು 99 ಗ್ರಾಮಗಳಿಗೆ ಸಾರಿಗೆ ಸಂಪರ್ಕವನ್ನು ಸುಧಾರಿಸಲಿದೆ.
ಪಿಎಂ ಗತಿ ಶಕ್ತಿ ರಾಷ್ಟ್ರೀಯ ಬೃಹತ್ ಯೋಜನೆ ಅಡಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಈ 46 ಕಿ.ಮೀ ಉದ್ದದ ಮಲ್ಟಿ-ಟ್ರ್ಯಾಕಿಂಗ್ ಯೋಜನೆಯು, 2028-29ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಈ ರೈಲು ಮಾರ್ಗ ಕರ್ನಾಟಕದ ಬಳ್ಳಾರಿ ಹಾಗೂ ಆಂಧ್ರಪ್ರದೇಶದ ಅನಂತಪುರ ಮತ್ತು ಕರ್ನೂಲ್ ಸೇರಿದಂತೆ ಒಟ್ಟು 3 ಜಿಲ್ಲೆಗಳಲ್ಲಿ ಈ ಯೋಜನೆ ಹಾದುಹೋಗಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
Key words: Union Cabinet, approves, rail route, between, Bellary-Guntakal






