ಉನ್ನಾವ್ ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕನ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ…

ಮೈಸೂರು,ಆ,1,2019(www.justkananda.in):  ಉತ್ತರ ಪ್ರದೇಶದ ಉನ್ನಾವ್ ನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಬಿಜೆಪಿ ಶಾಸಕನನ್ನ ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿ ಮೈಸೂರಿನಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಗಾಂಧಿ ಪ್ರತಿಮೆ ಬಳಿ ಜಮಾಯಿಸಿದ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ಸದಸ್ಯರು ಉನ್ನಾವ್ ಅತ್ಯಾಚಾರ ಪ್ರಕರಣ ಖಂಡಿಸಿ ಪ್ರತಿಭಟನೆ ನಡೆಸಿದರು. ಕೇಂದ್ರ ಹಾಗೂ ಉತ್ತರ ಪ್ರದೇಶದ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಅಪ್ರಾಪ್ತೆ ಮೇಲೆ ನಡೆದ ಅತ್ಯಾಚಾರ ಸಮಾಜವೇ ತಲೆ ತಗ್ಗಿಸುವಂತಹದು. ದೇಶದಲ್ಲಿ ಮಹಿಳೆಯರಿಗೆ ಭದ್ರತೆ ಇಲ್ಲದಂತಾಗಿದ್ದು, ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಲೇ ಇದೆ ಎಂದು ಕಿಡಿಕಾರಿದರು.

ಹಾಗೆಯೇ ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಸೆಂಗಾರ್ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪವಿದೆ. ಆದರೆ ಕೇಂದ್ರ ಸರ್ಕಾರ ಪ್ರಕರಣವನ್ನ ಮುಚ್ಚಿ ಹಾಕಿ ಶಾಸಕರನ್ನ ರಕ್ಷಿಸಲು ಯತ್ನಿಸುತ್ತಿದೆ. ಪ್ರಕರಣದ ಪ್ರಮುಖ ಸಾಕ್ಷಿದಾರರನ್ನ ಅಪಘಾತದಲ್ಲಿ ಸಾಯಿಸಲಾಗಿದೆ  ಎಂದು ಧರಣಿ ನಿರತರು ಆರೋಪಿಸಿದರು. ಕೇಂದ್ರ ಸರ್ಕಾರ ತಕ್ಷಣವೇ ಕಾನೂನು ಪ್ರಕಾರ ತನಿಖೆ ನಡೆಸಿ ತಕ್ಷಣವೇ ಕ್ರಮ ಕೈಗೊಂಡು ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು. ಮಹಿಳೆಯರಿಗೆ ಭದ್ರತೆ ಕೊಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆ ವೇಳೆ  ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪ ಅಮರನಾಥ್, ಮಾಜಿ ಮೇಯರ್ ಪುಷ್ಪಲತಾ ಚಿಕ್ಕಣ್ಣ, ಪಾಲಿಕೆ ಸದಸ್ಯೆ ಶಾಂತಕುಮಾರಿ ಮತ್ತಿತರರು ಉಪಸ್ಥಿತರಿದ್ದರು.

Key words: Unnao –rape case-Congress- protests – Mysore – action -against -BJP MLA