ಬೆಂಗಳೂರು,ಜುಲೈ,14,2025 (www.justkannada.in): ಬಹುಭಾಷಾ ನಟಿ ಬಿ.ಸರೋಜಾ ದೇವಿ ಅವರು ವಯೋಸಹಜ ಕಾಯಿಲೆಯಿಂದ ಇಂದು ನಿಧನರಾಗಿದ್ದು ಡಿಸಿಎಂ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಆರ್.ಅಶೋಕ್ ಸೇರಿ ಸಂತಾಪ ಸೂಚಿಸಿದ್ದಾರೆ.
ಬಿ. ಸರೋಜಾದೇವಿ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಬಿ.ಸರೋಜಾ ದೇವಿ ಅವರು ಮತ್ತು ಅವರ ಕುಟುಂಬದವರು ನಮಗೂ ಬಹಳ ಆತ್ಮಿಯರಾಗಿದ್ದರು. ರಾಜ್ಯ ಸರ್ಕಾರದ ಅನೇಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅವರು ಇಂದು ನಮ್ಮೊಂದಿಗೆ ಇಲ್ಲ. ಅವರ ಆರೋಗ್ಯ ಏರುಪೇರಾಗಿತ್ತು. ರಾಜ್ಯ ಸರ್ಕಾರ ವತಿಯಿಂದ ಹಾಗೂ ವೈಯಕ್ತಿಕವಾಗಿ ನಾನು ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದಿದ್ದಾರೆ.
ಇಡೀ ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟ- ಆರ್.ಅಶೋಕ್
ವಿಪಕ್ಷ ನಾಯಕ ಆರ್.ಅಶೋಕ್ ಸಂತಾಪ ಸೂಚಿಸಿ, ಕನ್ನಡ ಚಿತ್ರರಂಗದ ಹಿರಿಯ ನಟಿ, ‘ಅಭಿನಯ ಸರಸ್ವತಿ’ ಎಂದೇ ಹೆಸರುವಾಸಿಯಾಗಿದ್ದ ಬಿ.ಸರೋಜಾದೇವಿ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಇದು ಕನ್ನಡ ಚಿತ್ರರಂಗಕ್ಕೆ ಮಾತ್ರವಲ್ಲದೇ ಇಡೀ ಭಾರತಿಯ ಚಿತ್ರರಂಗಕ್ಕೆ ತುಂಬಲಾರದ ನಷ್ಟ. ಸರೋಜಾದೇವಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದರು.
‘ಅಭಿನಯ ಸರಸ್ವತಿ’ ನಿಧನ ದುಃಖ ತರಿಸಿದೆ :ಸಂಸದ ಬಸವರಾಜ ಬೊಮ್ಮಾಯಿ
ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿ, ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾದೇವಿ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದುಖವಾಗಿದೆ. “ಅಭಿನಯ ಸರಸ್ವತಿ” ಎಂದೇ ಖ್ಯಾತರಾಗಿ ಸುಮಾರು ಏಳು ದಶಕಗಳ ಕಾಲ ಕನ್ನಡ ಚಿತ್ರರಂಗವಷ್ಟೇ ಅಲ್ಲದೇ ಹಿಂದಿ, ತೆಲುಗು, ತಮಿಳು ಚಿತ್ರರಂಗದಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿ ಭಾರತೀಯ ಚಿತ್ರ ರಂಗದ ಶ್ರೇಷ್ಠ ನಟಿಯರ ಸಾಲಿನಲ್ಲಿ ಗುರುತಿಸಿಕೊಂಡಿದ್ದರು.
ಬಿ.ಸರೋಜಾದೇವಿ ಅವರ ಸಾಧನೆಗೆ ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿಗಳು ಅರಸಿ ಬಂದಿದ್ದವು. ಅವರ ನಿಧನದಿಂದ ಕನ್ನಡ ಚಿತ್ರರಂಗ ಬಡವಾದಂತಾಗಿದೆ. ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಅಭಿಮಾನಿಗಳು ಹಾಗೂ ಅವರ ಕುಟುಂಬದವರಿಗೆ ಭಗವಂತ ಕರುಣಿಸಲಿ, ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.
ನಟ ಜಗ್ಗೇಶ್ ಮಾತನಾಡಿ, ಸರೋಜಾ ದೇವಿ ಅವರು ಭಾರತೀಯ ಚಿತ್ರರಂಗದಲ್ಲಿ ಬಹಳ ದೊಡ್ಡ ಹೆಸರು ಮಾಡಿದವರು. ತಮಿಳುನಾಡು ಚಿತ್ರರಂಗದಲ್ಲೂ ಬಹುದೊಡ್ಡ ಹೆಸರು ಸರೋಜಾದೇವಿ ಅವರ ಜತೆ ನನಗೂ ಒಳ್ಳೆಯ ಬಾಂಧವ್ಯ ಇತ್ತು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.
Key words: DCM, DK Shivakumar, Ashok, condole, death , veteran actress, B. Saroja Devi.