ನಾಳೆ ಮೈಸೂರಲ್ಲಿ ಕಾಂಗ್ರೆಸ್ ವಿದ್ಯಾರ್ಥಿ ಘಟಕದಿಂದ ‘ವಿದ್ಯಾರ್ಥಿ ಏಕತಾ ಮನ್ವಂತರ’ ರಾಜ್ಯ ಕಾರ್ಯಕಾರಿಣಿ ಸಭೆ

ಮೈಸೂರು, ಫೆಬ್ರವರಿ 22, 2022 (www.justkannada.in): ರಾಜ್ಯದಲ್ಲಿ ಹೆಜಾಬ್-ಕೇಸರಿ ಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ಕಾಂಗ್ರೆಸ್ ವಿದ್ಯಾರ್ಥಿ ಘಟಕದಿಂದ ವಿದ್ಯಾರ್ಥಿ ಏಕತಾ ಮನ್ವಂತರ ರಾಜ್ಯ ಕಾರ್ಯಕಾರಿಣಿ ಸಭೆ ಆಯೋಜನೆ ಮಾಡಲಾಗಿದೆ.

ಮೈಸೂರಿನ ರೈಲ್ವೆ ನಿಲ್ದಾಣದ ಬಳಿಯಿರುವ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಎನ್ ಎಸ್ ಯು ಐ ರಾಜ್ಯ ಪ್ರಧಾನ ಕಾರ್ಯದರ್ಶಿ ರಫೀಕ್ ಅಲಿ ಈ ಕುರಿತು ಮಾಹಿತಿ ನೀಡಿದರು.

ಪ್ರಸ್ತುತ ಸನ್ನಿವೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಜಾಗೃತಿ ಮೂಡಿಸುವುದು, ರಾಜಕೀಯ ನಾಯಕರ ಸಂಚಿಗೆ ವಿದ್ಯಾರ್ಥಿಗಳು ಬಲಿಯಾಗದಂತೆ ಅರಿವು ಮೂಡಿಸಲಾಗುವುದು. ಹಿಜಾಬ್ ವಿಚಾರದಲ್ಲಿ ನ್ಯಾಯಾಲಯ ನೀಡಿರುವ ಆದೇಶವನ್ನು ಪಾಲಿಸಬೇಕು. ನ್ಯಾಯಾಲಯದ ಆದೇಶವನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಹೇಳಿದರು.

ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ. ಇದೇ ವಿಚಾರ ಮುಂದಿಟ್ಟುಕೊಂಡು ರಾಜ್ಯದ ಹಲವೆಡೆ ಅಹಿತಕರ ಘಟನೆಗಳು ನಡೆದಿವೆ‌. ನಿನ್ನೆ ಶಿವಮೊಗ್ಗದಲ್ಲಿ ಓರ್ವ ಯುವಕರ ಕೊಲೆಯಾಗಿದೆ‌. ಶಿವಮೊಗ್ಗ ಘಟನೆ ಸಂಬಂಧ ಸಚಿವ ಈಶ್ವರಪ್ಪ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಘಟನೆ ಕುರಿತು ತನಿಖೆ ಆರಂಭವಾಗುವ ಮೊದಲೇ ಒಂದು ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಹೇಳಿಕೆ ನೀಡಿದ್ದಾರೆ ಎಂದು ಟೀಕಿಸಿದರು.

ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಈ ರೀತಿಯ ಪ್ರಚೋದನಾಕಾರಿ ಹೇಳಿಕೆ ನೀಡಬಾರದು. ರಾಜಕೀಯ ನಾಯಕರು ‌ನೀಡುವ ಪ್ರಚೋದನಾಕಾರಿ ಹೇಳಿಕೆಗೆ ಅಮಾಯಕರು ಬಲಿಯಾಗುತ್ತಿದ್ದಾರೆ ಎಂದು ಎನ್ ಎಸ್ ಯು ಐ ರಾಜ್ಯ ಪ್ರಧಾನ ಕಾರ್ಯದರ್ಶಿ ರಫೀಕ್ ಅಲಿ ಹೇಳಿದರು.